ಏಪ್ರಿಲ್ 20ರಂದು ಬಿಜೆಪಿ ಸಾರ್ವಜನಿಕ ಸಮಾವೇಶ: ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಪ್ರವೇಶ

Ravi Talawar
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 17: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಈಗಾಗಲೇ ಹಲವು ಮೈತ್ರಿ ಸಮಾವೇಶ ನಡೆಸಿ ಒಗ್ಗಟ್ಟು ಪ್ರದರ್ಶನ ನಡೆಸಿದ್ದಾರೆ.

ಕಳೆದ ಭಾನುವಾರ ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಜತೆ ವೇದಿಕೆ ಹಂಚಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ  ಬಳಿಕ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು. ಇದೀಗ ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 20ರಂದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಒಂದೇ ದಿನ ರಾಜ್ಯದಲ್ಲಿ ಎರಡು ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಮತ ಯಾಚನೆ ಮಾಡಲಿದ್ದಾರೆ. ಬಳಿಕ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.

ಪ್ರಧಾನಿ ಮೋದಿ ಸಾರ್ವಜನಿಕ ಚುನಾವಣಾ ಪ್ರಚಾರ ಸಮಾವೇಶ ಹಿನ್ನೆಲೆ ಅರಮನೆ ಮೈದಾನದಲ್ಲಿ ಪ್ರಚಾರ ವೇದಿಕೆ ನಿರ್ಮಾಣಕ್ಕೆ ಬಿಜೆಪಿಯಿಂದ ಗುದ್ದಲಿ ಪೂಜೆ ನೆರವೇರಿತು. ಅರಮನೆ ಮೈದಾನದಲ್ಲಿ ಪೂಜಾ ಕಾರ್ಯಕ್ರಮ ನಡೆಸಿ ಗುದ್ದಲಿ ಪೂಜೆ ಮಾಡಲಾಯಿತು. ಬೆಂಗಳೂರಿನ ಬಿಜೆಪಿ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಸಪ್ತಗಿರಿಗೌಡ, ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆ ಮಂಜುಳಾ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article