ಗೀತಾ ಶಿವರಾಜಕುಮಾರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಉಮೇದುವಾರಿಕೆ

Ravi Talawar
WhatsApp Group Join Now
Telegram Group Join Now

ಬೆಂಗಳೂರು,ಏಪ್ರಿಲ್15: ಕರ್ನಾಟಕದಲ್ಲಿ ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಸೋಮವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ನಾಯಕ ಪ್ರಲ್ಹಾದ ಜೋಶಿ ಮತ್ತು ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಹಾವೇರಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಬೊಮ್ಮಾಯಿ ನಾಮಪತ್ರ ಸಲ್ಲಿಸಿದ್ದು, ಮಾಜಿ ಸಚಿವ ಬಿಸಿ ಪಾಟೀಲ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಅವರು ತಮ್ಮ ಪೋಷಕರ ಸ್ಮಾರಕಕ್ಕೆ ನಮನ ಸಲ್ಲಿಸಿದರು.

ಬಸವರಾಜ ಬೊಮ್ಮಾಯಿ ಅವರು ಜನತಾ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ಆರ್ ಬೊಮ್ಮಾಯಿ ಅವರ ಪುತ್ರ. ಬೊಮ್ಮಾಯಿ ಅವರ ಎದುರಾಳಿ ಕಾಂಗ್ರೆಸ್‌ನ ಆನಂದಸ್ವಾಮಿ ಗಡ್ಡದೇವರಮಠ ಕೂಡ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾಗಿರುವ ಜೋಶಿ ಅವರು ಧಾರವಾಡದಿಂದ ನಾಮಪತ್ರ ಸಲ್ಲಿಸಿದರು. ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಮುಖಂಡರು ಜೊತೆಗಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಜೋಶಿ ನಾಯಕರೊಂದಿಗೆ ರೋಡ್ ಶೋ ನಡೆಸಿದರು.

ಕೇಂದ್ರ ಸಚಿವ ಭಗವಂತ ಖೂಬಾ ಬೀದರ್‌ನಿಂದ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ಅವರು ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕೂಡ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈವೇಳೆ, ಡಿಕೆ ಶಿವಕುಮಾರ್, ಪಕ್ಷದ ಮುಖಂಡ ಲಕ್ಷ್ಮಣ ಸವದಿ ಸೇರಿದಂತೆ ಇತರರು ಇದ್ದರು.

ಇದಕ್ಕೂ ಮುನ್ನ ರೋಡ್ ಶೋನಲ್ಲಿ ಅವರ ತಾಯಿ, ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಮತ್ತು ಇತರ ನಾಯಕರು ಇದ್ದರು.

ಶಿವರಾಜಕುಮಾರ್, ಗೀತಾ ಅವರ ಸಹೋದರ ಹಾಗೂ ರಾಜ್ಯದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಪಕ್ಷದ ಹಲವು ಮುಖಂಡರು ಜೊತೆಗಿದ್ದರು. ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ರೋಡ್ ಶೋನಲ್ಲಿ ಭಾಗವಹಿಸಿದ್ದರು.

ಚಿಕ್ಕೋಡಿಯಿಂದ ಪುನರಾಯ್ಕೆ ಬಯಸಿರುವ ಬಿಜೆಪಿ ಸಂಸದ ಅಣ್ಣಾಸಾಹೇಬ ಶಂಕರ ಜೊಲ್ಲೆ ಹಾಗೂ ದಾವಣಗೆರೆಯಿಂದ ಪಕ್ಷದ ಸಂಸದ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಎರಡನೇ ಹಂತದಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

WhatsApp Group Join Now
Telegram Group Join Now
Share This Article