ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

Ravi Talawar
WhatsApp Group Join Now
Telegram Group Join Now

ಬೆಂಗಳೂರು,30: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ನಡುವೆ ಅಧಿಕೃತ ಪ್ರಕಟಣೆ ಹೊರಡಿಸಿದ ಪಕ್ಷ, ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಘೋಷಿಸಲಾಗಿದೆ.

 ’’ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಪಕ್ಷದ ಗೌರವಕ್ಕೆ ಧಕ್ಕೆ ಉಂಟಾಗಿದೆ. ಜೊತೆಗೆ ಪ್ರಕರಣ ಸಂಬಂಧ ಸರ್ಕಾರ ಈಗಾಗಲೇ ಎಸ್​ಐಟಿ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ‘‘ ಎಂದು ಜೆಡಿಎಸ್​ ಮಹಾಪ್ರಧಾನ ಕಾರ್ಯದರ್ಶಿ ಕೆ ಆರ್ ಶಿವಕುಮಾರ್ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

 ಹಾಸನ ವಿಡಿಯೋ ಪ್ರಕರಣ ಸಂಬಂಧ ಸರ್ಕಾರ ಈಗಾಗಲೇ ಎಸ್​ಐಟಿ ರಚಿಸಿ ತನಿಖೆಗೆ ಆದೇಶಿಸಿದೆ. ಜೊತೆಗೆ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ಜೆಡಿಎಸ್ ತುರ್ತು ಕೋರ್ ಕಮಿಟಿ ಸಭೆ ಕರೆದು, ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ತುರ್ತು ಕೋರ್ ಕಮಿಟಿ ಸಭೆ ಬಳಿಕ ಪಕ್ಷದ ರಾಜ್ಯಾಧ್ಯಕ್ಷ ಹೆಚ್​.ಡಿ.ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಪಕ್ಷದ ನಾಯಕರು ಸುದ್ದಿಗೋಷ್ಠಿ ನಡೆಸಿ, ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಿರುವ ಕುರಿತು ಪ್ರಕಟಿಸಿದರು.

ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿಸಿರುವುದನ್ನು ಸ್ವಾಗತಿಸಿದ್ದೇವೆ. ಜೊತೆಗೆ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ನಿರ್ಧರಿಸಿದ್ದೇವೆ. ಮಹಿಳೆಯರಿಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲು ಸರ್ವಾನುಮತದಿಂದ ನಿರ್ಧರಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​.ಡಿ.ದೇವೇಗೌಡರಿಗೆ ಶಿಫಾರಸು ಮಾಡಿದ್ದೇವೆ ಎಂದು ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article