ಬೆಂಗಳೂರು: ಮಹಿಳೆಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಶೀಘ್ರವೇ ಚಾಲನೆ ಸಿಗಲಿದೆ.
ಜುಲೈ 16 ರಿಂದ 18ರವರೆಗೆ ಬೆಂಗಳೂರಿನಲ್ಲಿ ಕೇಂದ್ರದ ಪ್ರತಿಪಕ್ಷ ನಾಯಕರ ಸಭೆ ನಡೆಯಲಿದ್ದು, ಪ್ರತಿ ಪಕ್ಷ ನಾಯಕರ ಸಭೆಯಲ್ಲಿ ಭಾಗವಹಿಸಲಿರುವ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕಾರಕ್ಕೆ ಚಾಲನೆ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ನಾಯಕಿಯರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಂದ ಯೋಜನೆಗೆ ಚಾಲನೆ ಕೊಡಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಬಯಸಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರಕ್ಕೆ ದಿನಾಂಕ ನಿಗದಿಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜುಲೈ 17 ಅಥವಾ 18 ರಂದು ಯೋಜನೆಗೆ ಚಾಲನೆ ನೀಡಲು ತೀರ್ಮಾನ ಮಾಡುವ ಸಾಧ್ಯತೆ ಇದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡಲಿದ್ದಾರೆ.